15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಜಿಲ್ಲೆಯಲ್ಲಿ ಮಾದಕ ವ್ಯಸನ ಮುಕ್ತ ಶಿಬಿರ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಬಳಲುತ್ತಿರುವವರು ವ್ಯಸನದಿಂದ ಹೊರಬರಲು ಅನುಕೂಲವಾಗುವಂತೆ ಮಾದಕ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾದವರು ಮತ್ತೆ ವ್ಯಸನಕ್ಕೆ ಒಳಗಾಗದಂತೆ ಅರಿವು ಮೂಡಿಸುವುದರ ಜೊತೆಗೆ, ವ್ಯಸನದಿಂದ ಹೊರಬರಲು ಅಗತ್ಯ ಚಿಕಿತ್ಸೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು.

ವಿವಿಧ ಸಂಘ-ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಮಾದಕ ವಸ್ತುಗಳ ಸರಬರಾಜು, ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಮಾದಕ ವಸ್ತುಗಳ ಬಳಕೆ ಕಂಡುಬಂದಿಲ್ಲ. ಆದರೆ ಪ್ರವಾಸ ಸೇರಿದಂತೆ ವಿವಿಧ ಕಾರಣಗಳಿಂದ ಜಿಲ್ಲೆಗೆ ಆಗಮಿಸುವವರಲ್ಲಿ ಮಾದಕ ವಸ್ತುಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು.

‘ಬೇಡ ಬ್ರೋ’ ಹಾಗೂ ‘ರೈಸ್’ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಆಂಟಿ ಡ್ರಗ್ ಕಮಿಟಿಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ಮಾದಕ ವಸ್ತು ಸೀಜ್‌ಗೆ ಸಂಬಂಧಿಸಿದ 5 ಪ್ರಕರಣಗಳಲ್ಲಿ 11 ಮಂದಿಯನ್ನು ಬಂಧಿಸಿ, ₹1.77 ಲಕ್ಷ ಮೌಲ್ಯದ 5.555 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದ 65 ಪ್ರಕರಣಗಳಲ್ಲಿ 70 ಮಂದಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್, ಅಬಕಾರಿ, ಅರಣ್ಯ, ಮೀನುಗಾರಿಕೆ, ಬಂದರು, ಅಂಚೆ, ಕೋಸ್ಟ್ ಗಾರ್ಡ್, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಬಕಾರಿ ಇಲಾಖೆಯ ಡಿ.ಸಿ. ಅಮಾನುಲ್ಲಾಖಾನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles