
ಮುಂಡಗೋಡ: ಪಟ್ಟಣದ ಆದಿ ಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ. ಎಸ್. ಡಿ. ಮುಡೆಣ್ಣವರ ಅವರಿಗೆ ಬೆಂಗಳೂರಿನ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಪ್ರತಿವರ್ಷ ನೀಡಲಾಗುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿದೆ.
ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಹೊಂದಿರುವ ಅಪಾರ ಕಾಳಜಿಯನ್ನು ಪರಿಗಣಿಸಿ ಪ್ರತಿಷ್ಠಾನವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.
ಮೇ 25ರಂದು ಹಾವೇರಿಯಲ್ಲಿ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ ಬೆಂಗಳೂರು ವತಿಯಿಂದ ನಡೆದ ರಾಜ್ಯ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶ್ರೀ. ಎಸ್. ಡಿ. ಮುಡೆಣ್ಣವರ ಅವರ ನೇತೃತ್ವದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ಹಾಗೂ ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಸಮ್ಮೇಳನದ ಯಶಸ್ಸಿನಲ್ಲಿ ಅವರ ಸಮರ್ಥ ಸಂಘಟನಾ ಕೌಶಲ್ಯ, ಸಾಹಿತ್ಯಾಭಿಮಾನ, ಕನ್ನಡಪರ ಕಾಳಜಿ ಹಾಗೂ ನಾಡು-ನುಡಿಯ ಸೇವೆ ಪ್ರಮುಖ ಪಾತ್ರ ವಹಿಸಿತ್ತು.
ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಸಂಘಟಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಮುಡೆಣ್ಣವರ ಅವರ ಸೇವೆಯನ್ನು ಗುರುತಿಸಿ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ, ಬೆಂಗಳೂರು ಈ ಗೌರವವನ್ನು ನೀಡುತ್ತಿದೆ.
ಆದಿ ಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ, ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ. ಎಸ್. ಡಿ. ಮುಡೆಣ್ಣವರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿರುವುದು ಮುಂಡಗೋಡ ತಾಲೂಕಿನ ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಅವರ ಈ ಸಾಧನೆಗೆ ಶಿಕ್ಷಣ ಕ್ಷೇತ್ರದ ಗಣ್ಯರು, ಕನ್ನಡ ಸಾಹಿತ್ಯಾಸಕ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಮುಂಡಗೋಡ ತಾಲೂಕಿನ ನಾಗರಿಕರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಅವರ ಕನ್ನಡಪರ ಹಾಗೂ ಸಾಂಸ್ಕೃತಿಕ ಸೇವೆ ಇನ್ನಷ್ಟು ವಿಸ್ತರಿಸಲಿ ಎಂದು ಶುಭ ಹಾರೈಸಿದ್ದಾರೆ.

